ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆಯು ಇಂದು 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ರಾಜ್ಯ ಸರ್ಕಾರವೂ ಇದರ ಸಂಭ್ರಮಾಚರಣೆಯಲ್ಲಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ವಿತರಣೆ ಮಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ ಸಿಎಂಗೆ ಸಾಥ್ ನೀಡಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.