ಬೆಂಗಳೂರು, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಂಟೇನರ್‌ ಒಂದು ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿಕೊಂಡು ಸ್ಲೀಪರ್‌ ಕೋಚ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ ಧಗಧಗನೇ ಹೊತ್ತಿ ಉರಿದಿದೆ. ಬಸ್‌ನಲ್ಲಿದ್ದ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಡ್ರೈವರ್‌ ಮತ್ತು ಕ್ಲೀನರ್‌ ಸೇರಿ 32 ಮಂದಿ ಪ್ರಯಾಣಿಕರು ಇದ್ದರು ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. ಅಲ್ಲದೇ, ಮೂವರು ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಪ್ರಯಾಣಿಕ ಬಸ್‌ನ ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ.

ಪಿಎಂ-ಸಿಎಂ ಸಂತಾಪ ; ಪರಿಹಾರ ಘೋಷಣೆ :
ಲಾರಿ ಹಾಗೂ ಬಸ್‌ ನಡುವಿನ ಅಪಘಾತದಲ್ಲಿ 5 ಮಂದಿ ಸಜೀವ ದಹನಗೊಂಡಿದ್ದು, ಘಟನೆಗೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇನ್ನು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯವಾಗಿದೆ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ :
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಇನ್ನು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಕೆಲವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಟ್ರೀಟ್ಮೆಂಟ್‌ ನೀಡಲಾಗ್ತಿದೆ.

Share.
Leave A Reply