ಬೆಂಗಳೂರು: ರಾಜ್ಯದಲ್ಲಿ ಕೊರೆಯುವ ಚಳಿಯಿದ್ದು, ಜನರು ಒದ್ದಾಡುತ್ತಿದ್ದಾರೆ. ಇದರ ಮಧ್ಯೆಯೇ ಹವಾಮಾನ ವೈಪರೀತ್ಯದಿಂದಾಗಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಜನರು ಹಾಗೂ ರೈತರು ಆತಂಕ ವ್ಯಕ್ತಪಡಿಸುವಂತಾಗುತ್ತಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ‘ಡಿತ್ವಾ’ ಚಂಡಮಾರುತದ ಪ್ರಭಾವ ತಗ್ಗಿ, ವಾಯುಭಾರ ಕುಸಿತವಾಗಿದ್ದು, ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗದೆ. ಈ ಪ್ರದೇಶಗಳ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಹಲವೆಡೆ ಶೀತ ಗಾಳಿಯೊಂದಿಗೆ ಚಳಿ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಹಾಗೂ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಇನ್ನುಳಿದಂತೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share.
Leave A Reply