
ಮರಗಳೇ ನನ್ನ ಮಕ್ಕಳು ಎಂದು ಪೋಷಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬದುಕಿನ ಪಯಣ ಮುಗಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ 114 ವರ್ಷಕ್ಕೆ ಉಸಿರು ಚೆಲ್ಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಇನ್ನು, ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಮರಗಳೇ ನನ್ನ ಮಕ್ಕಳು ಅಂತಾ ಸಾಲು ಮರದ ತಿಮ್ಮಕ್ಕ ಪೋಷಿಸಿದ್ದರು. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ನಾಡೋಜ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿಗೂ ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿವಿ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇನ್ನು, ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯ ಜೊತೆ ವಿವಾಹವಾಗಿದ್ದರು. ಆದರೆ ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದರು. ಇದೀಗ ಸಾಲು ಮರದ ತಿಮ್ಮಕ್ಕ ಕಾಲನ ಹಿಂದೆ ಸರಿದಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ.
