ಬೆಂಗಳೂರು: ರಾಜಕೀಯ ಅಂದ ಮೇಲೆ ಅಲ್ಲಿ ಭಾಷಣ ಇರಲೇಬೇಕು. ಆದರೆ, ಇತ್ತೀಚೆಗೆ ಶಿಷ್ಟಾಚಾರ ಮೀರಿ ಮಾತುಗಳು ಕೇಳಿ ಬರುತ್ತಿದ್ದವು. ಹಲವರಂತೂ ದ್ವೇಷಕ್ಕೆ ಹೆಚ್ಚು ಒತ್ತು ಕೊಟ್ಟು ನಾಲಿಗೆ ಹರಿ ಬಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ, ದ್ವೇಷ ಭಾಷಣಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ದ್ವೇಷ ಭಾಷಣಕ್ಕೆ ಮೂಗುದಾರ ಹಾಕುವ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025ಕ್ಕೆ ಅನುಮೋದನೆ ನೀಡಲಾಗಿದೆ.

ಕೆಲವೆಡೆ ಮತೀಯ ಕಲಹಗಳಿಗೆ ರಾಜ್ಯವು ಸಾಕ್ಷಿಯಾಗುತ್ತಿದೆ. ಹೀಗಾಗಿ ಮತೀಯ ದ್ವೇಷ ಭಾಷಣಗಳು ಎಗ್ಗಿಲ್ಲದೆ ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇವುಗಳಿಗೆ ಕಡಿವಾಣ ಹಾಕಲು ಈ ವಿಧೇಯಕ ಅಂಗೀಕಾರಕ್ಕೆ ಮುಂದಾಗಿದೆ. ಈಗಾಗಲೇ ಈ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಹೀಗಾಗಿ ಡಿ. 8 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ.

ದ್ವೇಷ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರಲು ಯತ್ನಿಸಿದರೆ, ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ನಿರ್ಧರಿಸಿದೆ. ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಇದರೊಂದಿಗೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025ರೊಂದಿಗೆ, “ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025″, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025″ ಕರಡು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯಿ ದತ್ತಿಗಳ (ತಿದ್ದುಪಡಿ) ವಿಧೇಯಕ 2025”, “ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇನ್ನಿತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025” ಗಳನ್ನು ಅನುಮೋದಿಸಲು ಹಾಗೂ ಸದರಿ ವಿಧೇಯಕವನ್ನು ವಿಧಾನಮಂಡಲದ ಮುಂದೆ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಈ ವಿಧೇಯಕಗಳನ್ನು ಬೆಳಗಾವಿಯಲ್ಲಿ ಡಿ. 8ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.

Share.
Leave A Reply