ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ದೆಹಲಿಗೆ ತೆರಳಿ ಕೂತುಹಲ ಮೂಡಿಸಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಹೈವೋಲ್ಟೇಜ್ ಮೀಟಿಂಗ್ ನಡೆಸಿದರು.
ಇನ್ನು ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮಹತ್ವದ ವಿಚಾರಗಳನ್ನ ತಿಳಿಸಿದ್ರು.. ರಾಜ್ಯದಲ್ಲಾದ ಕಾಲ್ತುಳಿತ ದುರಂತ (Bengaluru Stampede) ದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಿದರು.
ಜಾತಿ ಗಣತಿ ಕುರಿತು ಸಭೆಯಲ್ಲಿ ಮಹತ್ವದ ನಿರ್ಧಾರ
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಸಿ ವೇಣುಗೋಪಾಲ ಅವರು, “ಜಾತಿ ಜಾತಿಗಣತಿ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಾತಿ ಗಣತಿಯ ಅಂಕಿ-ಸಂಖ್ಯೆಗಳನ್ನು ಸೀಮಿತ ಸಮಯದಲ್ಲಿ ಪುನರ್ ಪರಿಶೀಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಇದೇ ಜೂನ್ 12ರಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ” ಎಂದು ತಿಳಿಸಿದ್ದಾರೆ.
ಕಾಲ್ತುಳಿತ ದುರಂತದ ಕುರಿತು ವಿವರ
ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣವೂ ಸಭೆಯಲ್ಲಿ ಚರ್ಚೆಗೆ ಒಳಪಟ್ಟಿತು. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್‌ಗೆ ಸ್ಪಷ್ಟನೆ ನೀಡಿದ್ದಾರೆ. “ಪ್ರತಿ ಜೀವದ ಬಗ್ಗೆ ಕಾಂಗ್ರೆಸ್‌ಗೆ ಕಾಳಜಿ ಇದೆ. ಘಟನೆ ಕುರಿತು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆ ಆರಂಭಿಸಿದೆ. ಈ ತನಿಖೆಯಲ್ಲಿ ಪಕ್ಷ ಯಾವುದೇ ರೀತಿಯ ಹಸ್ತಕ್ಷೇಪ ಮಾಡಲಾರದು. ಜನಪರ ತನಿಖೆ ನಡೆಯಲಿದೆ,” ಎಂದು ವೇಣುಗೋಪಾಲ ಸ್ಪಷ್ಟಪಡಿಸಿದರು.
ಇನ್ನು ಈ ಸಭೆಯಲ್ಲಿ ಇತರ ಯಾವುದೇ ರಾಜಕೀಯ ವಿಚಾರಗಳು ಚರ್ಚೆಗೆ ಬಂದಿಲ್ಲ ಎಂದು ಅವರು ತಿಳಿಸಿದರು. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಕೆಸಿ ವೇಣುಗೋಪಾಲ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದರು.