Site icon BosstvKannada

ನಮ್ಮ ಗ್ಯಾರಂಟಿಗಳನ್ನು ಕದ್ದ ಬಿಜೆಪಿಗೆ ನಾಚಿಕೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ನಾಚಿಕೆ ಕೂಡ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು.

ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ.

ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾವು ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ. ಬಿಜೆಪಿ-ಜೆಡಿಎಸ್ ಬೆಂಬಲಿಗರು, ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೆ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಿದ 500 ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.

ಜವಾಹರಲಾಲ್ ನೆಹರೂ ಅವಧಿಯಿಂದ ಇಂದಿರಾಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವಧಿಯವರೆಗೂ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ಎನ್ನುವುದನ್ನು ಇಡೀ ದೇಶ ಮರೆಯಲು ಸಾಧ್ಯವಿಲ್ಲ ಎಂದರು.

ಆಹಾರ ಭದ್ರತಾ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆ, ನರೇಗಾ ಎಲ್ಲವೂ ಆಗಿದ್ದು ಕಾಂಗ್ರೆಸ್ ಅವಧಿಯಲ್ಲಿ. ಬಿಜೆಪಿ ಅವಧಿಯಲ್ಲಿ ಇವರು ಏನು ಮಾಡಿದ್ದಾರೆ ತೋರಿಸಲಿ ಎಂದು ಸವಾಲು ಹಾಕಿದರು.

ಮನುವಾದಿಗಳು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ವಿರೋಧಿಗಳು, ಸಂವಿಧಾನದ ವಿರೋಧಿಗಳು. ಆದ್ದರಿಂದ ಸಾಮಾಜಿಕ ನ್ಯಾಯದ ಪರವಾಗಿರುವ ನಮ್ಮನ್ನು ಟೀಕಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೇಶದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಮನುವಾದಿಗಳ ಷಡ್ಯಂತ್ರವನ್ನು ಸೋಲಿಸುತ್ತಾರೆ ಎಂದರು.

Exit mobile version