ಮಂಗಳೂರು: ಪುತ್ತೂರು (Puttur) ಬಿಜೆಪಿ (BJP) ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮಗು ಕೊಟ್ಟು ಪರಾರಿಯಾಗಿರುವ ಘಟನೆ ನಡೆದು ಹಲವು ದಿನಗಳು ಕಳೆದರೂ ಯುವತಿಗೆ ಮಾತ್ರ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆ ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿದಿಲ್ಲ.

ನ್ಯಾಯಾಲಯದ ನಿರ್ದೇಶನದಂತೆ ಡಿಎನ್ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಅನೇಕರು ಸಂಧಾನಕ್ಕೆ ಯತ್ನಿಸಿದ್ದರೂ ವಿಫಲವಾಗಿದೆ.

ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್, ಶಾಲಾ ದಿನಗಳಿಂದ ಪರಿಚಿತವಾಗಿದ್ದ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ವಂಚಿಸಿದ್ದಾನೆಂಬುವುದು ಬೆಳಕಿಗೆ ಬಂದಿತ್ತು. ಗರ್ಭವತಿಯಾಗಿದ್ದ ಯುವತಿಯನ್ನು ಮದುವೆಯಾಗುವಂತೆ ಸಂಧಾನ ಮಾಡಿಸಲಾಗಿತ್ತು. ಆರಂಭದಲ್ಲಿ ಮದುವೆಯಾಗಲು ನಿರಾಕರಿಸಿದ್ದ ಆತ ಕೊನೆಗೆ ಒತ್ತಾಯದ ಮೇರೆಗೆ ಒಪ್ಪಿದ್ದ. ಆತನಿಗೆ 21 ವರ್ಷ ವಯಸ್ಸು ಪೂರ್ಣವಾಗದ ಕಾರಣ, ಆದ ನಂತರ ಮದುವೆ ಮಾಡುವುದಾಗಿ ಆತನ ತಂದೆ ಜಗನ್ನಿವಾಸ ರಾವ್ ಭರವಸೆ ನೀಡಿದ್ದರು. ಮಗು ಜನಿಸುತ್ತಿದ್ದಂತೆಯೇ ಕೃಷ್ಣ ರಾವ್ ಮದುವೆಗೆ ನಿರಾಕರಿಸಿದ್ದ. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಕೃಷ್ಣ ರಾವ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಯುವತಿಗೆ ಹೆರಿಗೆಯಾದ ನಂತರ ‘ಮಗು ನನ್ನದಲ್ಲ’ ಎಂದು ಕೃಷ್ಣ ರಾವ್ ಹೇಳಿದ್ದರಿಂದ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಆರೋಪಿ, ಸಂತ್ರಸ್ತೆ ಹಾಗೂ ಮಗುವಿನ ರಕ್ತ ಮಾದರಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾಗಿದೆ. ಈಗ ಮತ್ತೆ ಆರೋಪಿ ಹಾಗೂ ಕುಟುಂಬಸ್ಥರು ಮದುವೆಗೆ ನಿಕಾರಿಸಿದ್ದಾರೆ. ಹೀಗಾಗಿ ಸಂಧಾನ ಪ್ರಕ್ರಿಯೆ ಮುರಿದುಬಿದ್ದು, ಕಾನೂನಿನ ಮೂಲಕವೇ ನ್ಯಾಯ ಪಡೆಯಲು ಸಂತ್ರಸ್ತೆ ಮತ್ತು ಆಕೆಯ ಕುಟುಂಬ ನಿರ್ಧರಿಸಿದ್ದಾರೆ.

Share.
Leave A Reply