BosstvKannada

ಲ್ಯಾಂಡ್‌ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸೂಚನೆ

ಬೆಂಗಳೂರು, ಫೆ.02: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್‌ಲಾರ್ಡ್’ ಚಿತ್ರಕ್ಕೆ ಕರ್ನಾಟಕ ಸರ್ಕಾರವು ತೆರಿಗೆ ವಿನಾಯಿತಿ ನೀಡಲು ಮುಂದಾಗಿದೆ. ಸಾಮಾಜಿಕ ಅಸಮಾನತೆ ಹಾಗೂ ಸಮಾಜದಲ್ಲಿನ ವರ್ಗಭೇದದ ವಾಸ್ತವ ಚಿತ್ರಣವನ್ನು ಒಳಗೊಂಡಿರುವ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಜನವರಿ 23ರಂದು ರಾಜ್ಯಾದ್ಯಂತ ಬಿಡುಗಡೆಯಾದ ‘ಲ್ಯಾಂಡ್‌ ಲಾರ್ಡ್’ ಸಿನಿಮಾ ತನ್ನ ಗಂಭೀರ ವಿಷಯವಸ್ತು, ನೈಜತೆಯ ಕಥನ ಹಾಗೂ ದುನಿಯಾ ವಿಜಯ್ ಅವರ ಅಭಿನಯದ ಮೂಲಕ ಪ್ರೇಕ್ಷಕರು ಹಾಗೂ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಅಸಮಾನತೆ, ಜಾತಿ ಶೋಷಣೆ ಮತ್ತು ಶೋಷಿತ ವರ್ಗಗಳ ನೋವನ್ನು ಚಿತ್ರವು ಸ್ಪಷ್ಟವಾಗಿ ತೆರೆದಿಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸರ್ಕಾರ ಕೂಡ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ.

ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್‌ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ. ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Exit mobile version