ಉತ್ತರ ಕರ್ನಾಟಕದಲ್ಲಿ ಈ ಬಾರಿ ಸುರಿದ ಮಳೆಗೆ ಅತಿವೃಷ್ಟಿ ಉಂಟಾಗಿದ್ದಲ್ದೇ ನದಿ,ಕೆರೆ,ಹಳ್ಳ,ಕೊಳ್ಳ,ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಇದರಿಂದ ಸಾಕಷ್ಟು ಜಿಲ್ಲೆಗಳಲಿ ಅನಾವೃಷ್ಟಿಯು ಸಂಭವಿಸಿದೆ. ಅಲ್ಲದೇ ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ಬಾಗಿನವನ್ನು ಅರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.