Site icon BosstvKannada

ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರವೊಂದೇ ಉಳಿದಿದೆ : ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆಡಿಯೋ ವೈರಲ್ ಆದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಸತಿ ಯೋಜನೆ ಅಕ್ರಮಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸತ್ಯವನ್ನು ಬಿ.ಆರ್. ಪಾಟೀಲ್ ಜನತೆಯ ಮುಂದೆ ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದರು.

ವಿಜಯೇಂದ್ರ ಅವರು, “ರಾಜೀವ್ ಗಾಂಧಿ ವಸತಿ ಯೋಜನೆಯಡಿ ಬಡವರಿಗೆ ಮನೆ ಕೊಡಬೇಕಾದ ಇಲಾಖೆಯಲ್ಲಿ ಲಂಚ ಪಡೆದವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಸಾಕ್ಷಿಯಾಗಿದೆ. ಬಿ.ಆರ್. ಪಾಟೀಲ್ ಈ ಸತ್ಯವನ್ನು ಬಹಿರಂಗಪಡಿಸಿದ್ದಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರಿಂದಲೇ ಅವರಿಗೆ ಬೆದರಿಕೆ ಒಡ್ಡಲಾಗುತ್ತಿದೆ,” ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಸರ್ಕಾರದ ಆಡಳಿತವು ರಾಜ್ಯದ ಬಡವರಿಗೆ ಮತ್ತು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದ ವಿಜಯೇಂದ್ರ, “ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡಜನರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಅನೇಕ ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗಿತ್ತು. ಆದರೆ ಈಗ ಗಂಗಾ ಕಲ್ಯಾಣ ಯೋಜನೆಯಂತಹ ಕಾರ್ಯಕ್ರಮಗಳು ಮರೆಯಾಗಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರವೊಂದೇ ಉಳಿದಿದೆ,” ಎಂದು ಟೀಕಿಸಿದರು.

ರಾಜ್ಯದಾದ್ಯಂತ ಭ್ರಷ್ಟಾಚಾರವು ಕಾಂಗ್ರೆಸ್ ಆಡಳಿತದ ಮುಖ್ಯ ಗುರುತಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, “ಸರ್ಕಾರವೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ. ಬಿ.ಆರ್. ಪಾಟೀಲ್ ಅವರ ಮೂಲಕ ಈ ಸತ್ಯ ಹೊರಬಿದ್ದಿದೆ. ಈ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದೆ,” ಎಂದು ಘೋಷಿಸಿದರು.

Exit mobile version