ಪ್ರಚೋದನಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರಿಗೆ ಹೈಕೋರ್ಟ್ (High Court) ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ಹೊರಡಿಸಿ, ಜೂನ್ 10ಕ್ಕೆ ವಿಚಾರಣೆ ಮುಂದೂಡಿದ್ದಾರೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಬಂಟ್ವಾಳದ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರಭಾಕರ ಭಟ್‌ಗೆ ಸದ್ಯ ರಿಲೀಫ್ ಸಿಕ್ಕಿದೆ.
ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಕೇಸ್‌ಗೆ ಸಂಬಂಧಿಸಿ ದಂತೆ ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಕೋರ್ಟ್‌ನಲ್ಲಿ ವಾದ ಮಾಡಿದರು. ಭಾಷಣ ಮಾಡಿದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಕಲ್ಲಡ್ಕ ಪ್ರಭಾಕರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ.

