ನವದೆಹಲಿ: ಚುನಾವಣಾ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
2023ರ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ (Chittapura) ಮತ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶ್ವತ್ಥರಾಮ್ ರಾಥೋಡ್ ಎಂಬುವವರು ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಹಾಗೂ ಸತೀಶ್ ಚಂತ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ.
ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅಲ್ಲದೇ, 2021ರ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿದೆ. ಇದರೊಂದಿಗೆ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ಅಕ್ರಮವಾಗಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ನೀಡಿದೆ.

