BosstvKannada

ಮಾಜಿ ಸಚಿವರು, ಹಾಲಿ ಶಾಸಕರು ಆದ ಎಚ್.ವೈ.ಮೇಟಿ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಎಚ್.ವೈ ಮೇಟಿ ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಎಚ್.ವೈ ಮೇಟಿ ಇಂದು ನಿಧನರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹುಲ್ಲಪ್ಪ ಯಮನಪ್ಪ ಮೇಟಿ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್‌.ವೈ ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಎಚ್.ವೈ ಮೇಟಿ ಸಾವಿನ ಸುದ್ದಿ ಕೇಳಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತಾಗಿ ಸಿ.ಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿ ಕಂಬನಿ ಮಿಡಿದಿದ್ದಾರೆ. ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Exit mobile version