ಬೆಂಗಳೂರು : ನಾನು ರಾಜ್ಯ ರಾಜಕೀಯದಿಂದ ದೂರ ಸರಿಯೋದಿಲ್ಲ. ಆದರೆ, ಯಾವ ಸಮಯದಲ್ಲಿ ಬರಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಜೆ.ಪಿ ನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು, ಯಾವ ಸ್ಥಾನದಲ್ಲಿರಬೇಕು ಎಂಬುದನ್ನು ತೀರ್ಮಾನ ಮಾಡೋದು ನನ್ನ ಕೈಯಲ್ಲಿಲ್ಲ. ರಾಜ್ಯದ ಜನತೆಯೇ ಅದನ್ನು ನಿರ್ಧರಿಸುತ್ತಾರೆ ಎಂದಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡಿದ ಅವರು, ನಾವು ಮೈತ್ರಿಯ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೂ ಅವಕಾಶ ಕೊಡಬಾರದು. ನಮ್ಮ ಉದ್ದೇಶ ಒಂದೇ, ರಾಜ್ಯದಲ್ಲಿ ಒಳ್ಳೆಯ ಸರ್ಕಾರವನ್ನು ತರುವುದು ಮತ್ತು ಜನರನ್ನು ನೆಮ್ಮದಿಯಿಂದ ಬದುಕಿಸುವುದು. ವೈಯಕ್ತಿಕ ಆಸೆಗಿಂತ ಜನಹಿತವೇ ಮೊದಲ ಆದ್ಯತೆ ಎಂದರು.
ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಜನರಿಗೆ ಅನುಕೂಲವಾಗುವ, ಪ್ರಾಮಾಣಿಕ ಆಡಳಿತ ನೀಡುವ ಸರ್ಕಾರ ಬರಬೇಕು. ನಾನು ಯಾವ ಸ್ಥಾನದಲ್ಲಿ ಇರಬೇಕು ಎಂಬುದನ್ನು ರಾಜ್ಯದ ಜನತೆಯೇ ತೀರ್ಮಾನಿಸಬೇಕು ಎಂದು ಹೇಳಿದರು.

ಕೇಂದ್ರ ಸಚಿವರಾಗಿ ತಮಗೆ ನೀಡಿರುವ ಜವಾಬ್ದಾರಿಯ ಬಗ್ಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ನನಗೆ ಎರಡು ಮಹತ್ವದ ಇಲಾಖೆಗಳನ್ನು ನೀಡಿದ್ದಾರೆ. ಆ ಇಲಾಖೆಗಳ ಮೂಲಕ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡಲು ಈಗಾಗಲೇ ಬಲವಾದ ಅಡಿಪಾಯ ಹಾಕಿದ್ದೇನೆ. ಆದರೂ ರಾಜ್ಯ ರಾಜಕೀಯಕ್ಕೆ ಮರಳುವುದು ಅನಿವಾರ್ಯ ಎಂದು ಸೂಚಿಸಿದ ಅವರು, ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅನ್ನೋದನ್ನು ತೀರ್ಮಾನ ಮಾಡ್ತೀನಿ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡನಿಂದ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣ :
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಹೆಚ್‌ಡಿಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಸರ್ಕಾರ ಬಂದ ನಂತರ ಅಧಿಕಾರಿಗಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿರುವ ಮೇಲಿನವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸ್ತಿದ್ದಾರೆ ಎಂದು ಆರೋಪಿಸಿದರು.
ಯಾರೇ ತಪ್ಪು ಮಾಡಿದ್ರೂ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು. ಸರ್ಕಾರ ಗಂಭೀರವಾಗಿ ಕ್ರಮ ತೆಗೆದುಕೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸೋದಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಒಳಗಾಗದೇ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದರು.