Site icon BosstvKannada

ಸಚಿವ ಸಂಪುಟ ಸಭೆ : ಚಿಕ್ಕಬಳ್ಳಾಪುರ ಜಿಲ್ಲೆಗೆ ಅನುದಾನಗಳ ಸುರಿಮಳೆ!

ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ಕ್ಯಾಬಿನೆಟ್‌ ಸಭೆ ಜರುಗಿತು. ಈ ಸಭೆಯಲ್ಲಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ವಿನೂತನ ಮಾದರಿಯಲ್ಲಿ ಶಾಲೆ ಆರಂಭಿಸಲಿದ್ದೇವೆ. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಯುಪಿಎಸ್​ಸಿ ಪರೀಕ್ಷೆ ತರಬೇತಿ ನೀಡಲು 10 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ಎರಡು ವಸತಿ ಶಾಲೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಹೊಸ ತಾಲೂಕುಗಳಲ್ಲಿ ಸಮುದಾಯ ಆರೋಗ್ಯ ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ಎತ್ತಿನಹೊಳೆಗೆ ಒತ್ತು
ಎತ್ತಿನಹೊಳೆ ಯೋಜನೆಗೆ 23,251 ಕೋಟಿ ರೂ. ಮಂಜೂರು ಮಾಡಲಾಗಿದೆ. ಈಗಾಗಲೇ ಎತ್ತಿನಹೊಳೆ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚಾಗಿದೆ. ಎತ್ತಿನಹೊಳೆ ಯೋಜನೆಯಿಂದ 21.1 ಟಿಎಂಸಿ ನೀರು ಸಿಗಲಿದೆ. ಕುಡಿಯುವ ಉದ್ದೇಶಕ್ಕೆ 14 ಟಿಎಂಸಿ ನೀರು ಬೇಕು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಸಿಗಲಿದೆ. ಮೊದಲು ಕುಡಿಯುವ ನೀರಿನ ಯೋಜನೆ ಮುಗಿಸಲು ನಿರ್ಧಾರ ಮಾಡಿದ್ದೇವೆ. ಶೇಕಡಾ 96ರಷ್ಟು ಕೆಲಸ ಮುಗಿದಿದೆ. ಎರಡು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳಿಸುತ್ತೇವೆ ಎಂದರು.

ಬೆಂಗಳೂರು ಗ್ರಾಮಾಂತರ ಹೆಸರು ಬದಲಾವಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮತ್ತು ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ನಿರ್ಧಾರ ಮಾಡಿದ್ದೇವೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.

ನಂದಿ ಬೆಟ್ಟ ಅಭಿವೃದ್ಧಿ ಭರ್ಜರಿ ಕೊಡುಗೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೋಲಾರದ ಅಮಾನಿಕೆರೆ, ಅಂತರಗಂಗಾ ಬೆಟ್ಟ ಅಭಿವೃದ್ಧಿಗೆ 79 ಕೋಟಿ ರೂ., ಗಂಟ್ಲ ಮಲ್ಲಮ್ಮ ಜಲಾಶಯ ನಿರ್ಮಾಣಕ್ಕೆ 189 ಕೋಟಿ ರೂ., ನಂದಿಗಿರಿಧಾಮ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆಗೆ ಹೆಚ್​.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ ಎಂದರು.

Exit mobile version