ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಳ್ಳಂ ಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರ ದಂಡೆ ಹರಿದು ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ನಾಗರಾಧನೆಯ ಕ್ಷೇತ್ರವಾಗಿರುವ ಘಾಟಿ ಸುಬ್ರಮಣ್ಯ ದೇಗುಲಕ್ಕೆ ಬೆಳಗ್ಗೆಯಿಂದಲೇ ಭಕ್ತರು ಆಗಮಿಸುತ್ತಿದ್ದಾರೆ.
ದೇವಾಲಯಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು, ಹೂವು, ತಳಿರು-ತೋರಣಗಳಿಂದ ಕಂಗೊಳಿಸುತ್ತಿದೆ. ನಾಗರ ಪಂಚಮಿ ಹಬ್ಬದ ಪ್ರಯುಕ್ತ ನಾಡಿನೆಲ್ಲೆಡೆ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡ್ತಿದ್ದಾರೆ.

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಬರುವ ಮೊದಲ ಹಬ್ಬ ನಾಗರಪಂಚಮಿ. ಹೀಗಾಗಿ ಈ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತದೆ. ಮುಂಜಾನೆಯಿಂದಲೇ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ರುದ್ರಾಭಿಷೇಕ ಸೇರಿದಂತೆ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು, ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದುಕೊಳ್ಳುತ್ತಿದ್ದಾರೆ.