ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಣೆ ನಂತರ ನಡೆದ ಸುದ್ದಿಗೋಷ್ಟಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ವಿಜಯಪುರ ಮತ್ತು ಬೆಂಗಳೂರಿನಲ್ಲಿದ್ದರೂ, ರೈತರ ಬದುಕನ್ನು ಹಸನುಗೊಳಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ರೈತರ ಬವಣೆಯನ್ನು ನಿವಾರಿಸಿ, ಸಮುದ್ರಕ್ಕೆ ವ್ಯರ್ಥವಾಗಿ ಸೇರುವ ಕೃಷ್ಣೆಯ ನೀರನ್ನು ಉಳಿಸಿ, ರೈತರ ಕೃಷಿ ಚಟುವಟಿಕೆಗೆ ಬಳಸುವಂತಾಗಬೇಕೆಂಬ ಆಶಯವನ್ನು ಮುಖ್ಯಮಂತ್ರಿಗಳು ಹಾಗೂ ನಾನು ಹೊಂದಿದ್ದು, ಈ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ , ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು..

Share.
Leave A Reply