ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ (Yediyurappa) ಸೇರಿದಂತೆ ನಾಲ್ವರು ಆರೋಪಿಗಳು ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪಗೆ ಕೆಳ ಹಂತದ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ (Highcourt) ಮೆಟ್ಟಿಲೇರಿದ್ದರು.
ಆದರೆ, ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸಹಾಯ ಕೇಳಲು ಬಂದಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಕುರಿತು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಕುರಿತು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

