ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಗಾಳಿ ಮಳೆ ಅಬ್ಬರ ಹೆಚ್ಚಾಗಿದ್ದು ಜನರು ಹೈರಾಣಾಗಿದ್ದಾರೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ಅತಿಯಾಗಿ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 11ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡಿನಲ್ಲಿ ಗಾಳಿ, ಮಳೆಯು ಹೆಚ್ಚಾಗಿರುವ ಕಾರಣ ಗುಡ್ಡ ಕುಸಿತದ ಮುನ್ನೆಚ್ಚರಿಕೆಯನ್ನ ನೀಡಲಾಗಿದ್ದು, ಮನೆಯಿಂದ ಹೊರ ಬರದಂತೆ ಎಚ್ಚರಿಕೆ ನೀಡಿದ್ದಾರೆ.
ಮಲೆನಾಡು, ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..
