Site icon BosstvKannada

ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ರಾಜ್ಯಕ್ಕೆ ಆಗಮಿಸುತ್ತಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ನ. 28ರಂದು ಉಡುಪಿಯ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಆಗಮಿಸುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿಯು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನ. 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದು, ಮಧ್ಯಾಹ್ನ 12ಕ್ಕೆ ನೇರವಾಗಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ನಂತರ ಸುವರ್ಣತೀರ್ಥ ಮಂಟಪ ಮತ್ತು ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಈ ಧಾರ್ಮಿಕ ಉತ್ಸವದಲ್ಲಿ ಒಂದು ಲಕ್ಷ ಭಕ್ತರು ಭಾಗವಹಿಸಲಿದ್ದು, ಒಂದೇ ಸಮಯದಲ್ಲಿ ಭಗವದ್ಗೀತೆಯ ಶ್ಲೋಕ ಪಠಿಸಲಿದ್ದಾರೆ. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 2ಕ್ಕೆ ಗೋವಾಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ಕಚೇರಿ ಸೂಚಿಸಿದೆ. ಸೂಕ್ತ ಭದ್ರತಾ ವ್ಯವಸ್ಥೆ ಕುರಿತು ಎಸ್‌ ಪಿಜಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕೆಂದು ಸೂಚಿಸಲಾಗಿದೆ.

Exit mobile version