RSS ಶತಮಾನೋತ್ಸವ ಪೂರೈಸಿದೆ. ಇಂಥ ಸಂದರ್ಭದಲ್ಲಿ ಸಂಘದ ಮೇಲೆ ಸಾಲು ಸಾಲು ಆರೋಪಗಳು ಕೇಳಿಬರುತ್ತಿದೆ. ಕೆಲ ದಿನಗಳ ಹಿಂದೆ ಕೇರಳದ ಟೆಕ್ಕಿಯೊಬ್ಬ ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಮನನೊಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿತ್ತು. ಈ ಕುರಿತಾಗಿ ಪ್ರತಿಕ್ರಿಯಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ RSSನ ಮೇಲೆ ಗಂಭೀರ ಆರೋಪ ಮಾಡಿದ್ದರು. ಕೇವಲ ಕೇರಳ ಮಾತ್ರವಲ್ಲ ಇಲ್ಲೂ ಸಹ RSSನ ನಾಯಕರಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದಿದ್ದರು. ಆರ್.ಎಸ್.ಎಸ್ ಸಂಘದ ಶಿಬಿರಕ್ಕೆ ಸರ್ಕಾರಿ ಜಾಗ ಕೊಡಬಾರದು, ಕರ್ನಾಟಕದಲ್ಲಿ ಸಂಘವನ್ನ ಬ್ಯಾನ್ ಮಾಡಬೇಕು ಎಂಬ ಮಾತನಾಡಿದ್ದು, ಇದರಿಂದಾಗಿ ರೊಚ್ಚಿಗೆದ್ದ RSS ಕೆಲ ಯುವಕರು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದಾರೆ. ಕರೆ ಮಾಡಿ ಮನ ಬಂದಂತೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಯಲ್ಲಿ ಈ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ.
RSS ಯುವಕರ ಮತ್ತು ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಛವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು @BYVijayendra @RAshokaBJP @CTRavi_BJP @karkalasunil @mepratap @NswamyChalavadi ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ. ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ಧರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. RSSನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ಧ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ಧಾಂತಿಕ ರಾಜಕಾರಣ, ಮುಗ್ಧ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದಿದ್ದಾರೆ. ಸದ್ಯ ಇದೇ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ವಾಕ್ಸಮರ ತೀವ್ರಗೊಂಡಿದೆ.
Read Also : ಜೀ ಕುಟುಂಬ ಅವಾರ್ಡ್ಸ್ 2025ಕ್ಕೆ ಕ್ಷಣಗಣನೆ : ಮನರಂಜನೆಯ ಭರಪೂರ ಪ್ಯಾಕೇಜ್