ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಒಣ ಹವೆ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಳಿಯ ಅನುಭವ ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಇಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಲೆನಾಡಿನ ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

