Site icon BosstvKannada

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್!

ಬೆಂಗಳೂರು, ಮಾ.06: ಗ್ಯಾರಂಟಿ ಯೋಜನೆಗಳ ಬರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಈ ನಡುವೆ ಮಕ್ಕಳ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆಯೊಂದನ್ನು ಈ ವೇಳೆ ಹೊರಡಿಸಲಾಗಿದ್ದು, ಇದರ ಅನ್ವಯ ಇನ್ಮುಂದೆ 16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಲಾಗಿದೆ. ಶಾಲಾ ಮಕ್ಕಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಏಕಾಗ್ರತೆ ಕುಂಠಿತವಾಗುತ್ತಿದೆ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.

ಅಪ್ರಾಪ್ತರು ಆನ್‌ಲೈನ್ ಕಿರುಕುಳ, ಅಶ್ಲೀಲ ವಿಷಯಗಳು ಮತ್ತು ಸೈಬರ್ ವಂಚನೆಗಳಿಗೆ ಬಲಿಯಾಗುವುದನ್ನು ತಡೆಯುವುದು ಇದರ ಪ್ರಮುಖ ಉದ್ದೇಶವಾಗಿದೆ. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Exit mobile version