ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಕಾರ್ಖಾನೆಯಲ್ಲಿ (Telangana Pharma Blast) ಭಾರೀ ಸ್ಪೋಟ ಸಂಭವಿಸಿದೆ. ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸ್ಫೋಟದ ಭೀಕರತೆಗೆ ಅಲ್ಲಿದ್ದ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರ್ಖಾನೆಯೊಳಗೆ ಸಾಕಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿದ್ದಾರೆ.

ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘಟನೆ ಸಂತಾಪ ಸೂಚಿಸಿ, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿದು ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

Share.
Leave A Reply