ಬೆಂಗಳೂರು: ರಾಜ್ಯದಾದ್ಯಂತ ನಾಳೆ ಭೀಕರ ಚಳಿ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬೆಳಗಿನ ಜಾವ ತೀವ್ರ ಚಳಿ ಹಾಗೂ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬೆಳಗ್ಗೆಯ ನಂತರ ಒಣಹವೆ ಇರಲಿದ್ದು, ತಾಪಮಾನ ಸ್ವಲ್ಪ ಕಡಿಮೆ ಇರಲಿದೆ. ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾತಾವರಣ ಸಾಮಾನ್ಯವಾಗಿರಲಿದೆ. ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ತಣ್ಣನೆಯ ವಾತಾವರಣ ಇರಲಿದೆ. ಮಂಜು ಹೆಚ್ಚಾಗಲಿದೆ. ಬಹುತೇಕ ಜಿಲ್ಲೆಗಳಲ್ಲಿ ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

