ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ(ತಡೆ, ನಿಷೇಧ ಮತ್ತು ಪರಿಹಾರ)- ಮಸೂದೆ 2025ನ್ನು ಅಂಗೀಕರಿಸಲಾಯಿತು. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಬಹಿಷ್ಕಾರ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ.
ವಿಧೇಯಕ ಕುರಿತಾಗಿ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಈ “ವಿಧೇಯಕವನ್ನು ಯಾರೂ ವಿರೋಧಿಸುವುದಿಲ್ಲ. ನಮ್ಮದು ಒಂದೇ ರಕ್ತ ಎಂದು ಹೇಳುತ್ತಾರೆ. ಆದರೆ ಸಲೂನಿನಲ್ಲಿ ದಲಿತರು ಬಂದಿದ್ದಾರೆ ಎಂದು ಬಹಿಷ್ಕಾರ ಹಾಕಲಾಗಿದೆ. ಜಾತಿ ತಾರತಮ್ಯ ಅಕ್ಷಮ್ಯ ಅಪರಾಧ. ಹೀಗಾಗಿ ಈ ವಿಧೇಯಕವನ್ನು ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ಆನಂತರ ಈ ವಿಧೇಯಕದ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ನೇಮಿರಾಜ್ ನಾಯ್ಕ, ಹರೀಶ್ ಪೂಂಜಾ ಸೇರಿದಂತೆ ಹಲವರು ಮಾತನಾಡಿದರು.
ಈ ವಿಧೇಯಕದ ಪ್ರಕಾರ ಇನ್ನು ಮುಂದೆ, ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಅಲ್ಲದೇ, ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ, ಪಂಚಾಯಿತಿ ನಡೆಸಿದರೆ ಅಂಥವರು ಕೂಡ ಅಪರಾಧಿಗಳಾಗುತ್ತಾರೆ. ಬಹಿಷ್ಕಾರಕ್ಕೆ ಒತ್ತಡ ಹೇರುವುದು, ಬಹಿಷ್ಕಾರದ ಪರ ಮತ ಹಾಕುವುದು ಹಾಗೂ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಅಪರಾಧವಾಗುತ್ತದೆ. ಬಹಿಷ್ಕಾರಕ್ಕೆ ಒಳಗಾಗುವವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಲು ಅವಕಾಶವಿರುದ್ದತೆ. ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸುವ ಆದೇಶ ಹೊರಡಿಸಲು ಅವಕಾಶವಿರುತ್ತದೆ. ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು ಅಪರಾಧವಾಗಿದೆ. ಅಲ್ಲದೇ, ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು ಅಪರಾಧ. ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು ಅಪರಾಧವಾಗುತ್ತದೆ. ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು ಅಪರಾಧವಾಗುತ್ತದೆ. ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು ಅಪರಾಧವಾಗುತ್ತದೆ. ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು ಅಪರಾಧವಾಗುತ್ತದೆ. ಈ ತಪ್ಪುಗಳನ್ನು ಮಾಡಿದರೆ ವಿಧೇಯಕದಂತೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ.
